ಮಂಗಳೂರು ನ. 14 : ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಇಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಸಾಂಪ್ರದಾಯಿಕ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೖಕ್ ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಜೊತೆಗೆ ಜೀವನದ ಉನ್ನತಿಗೆ ಶಿಕ್ಷಣವೇ ಅಂತಿಮವಾಗಿರುವ ಕಾರಣ ಶಿಕ್ಷಣದ ಕಡೆಗೆ ಒಲವು ಮೂಡಿಸಬೇಕು ಎಂದು ಹೇಳಿದರು.
ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಮಾತನಾಡಿ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕಾರ್ಯಕ್ರಮ ಇದಾಗಿದೆ. ಈ ಮೂಲಕ ಸಂಸ್ಕಾರಯುತ ವಿದ್ಯಾರ್ಥಿಗಳಾಗಿ ಸಮಾಜಕ್ಕೆ ಮಾದರಿಯಾಗಬೇಕೆಂದು ತಿಳಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಂಪ್ರದಾಯಿಕ ದಿನಾಚರಣೆ ನಡೆಸಲಾಯಿತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪನ್ನು ಧರಿಸಿ ವೇದಿಕೆ ಮೇಲೆ ಕ್ಯಾಟ್ ವಾಕ್ ನಡೆದು ಸಂಭ್ರಮಿಸಿದರು. ಉತ್ತಮ ಸಾಂಪ್ರದಾಯಿಕ ಉಡುಪನ್ನು ಧರಿಸಿದ ವಿದ್ಯಾರ್ಥಿಗಳನ್ನು ಆರಿಸಿ ಶಕ್ತಿ ಸಿರಿ ಮತ್ತು ಶಕ್ತಿ ಶ್ರೀ ಬಿರುದನ್ನು ನೀಡಲಾಯಿತು. ವಿದ್ಯಾರ್ಥಿಗಳಿಗೆ ಹಲವು ಬಗೆಯ ಆಟಗಳನ್ನು ಆಡಿಸಿ ಮನರಂಜಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ್ ಕೆ., ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ಉಪಸ್ಥಿತರಿದ್ದರು.